Cinisuddi Fresh Cini News 

ಏಪ್ರಿಲ್ 10ಕ್ಕೆ “ಅರ್ಜುನ್ ಗೌಡ” ಚಿತ್ರದ ಟ್ರೇಲರ್ ಬಿಡುಗಡೆ

ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಅದ್ದೂರಿ ಚಿತ್ರಗಳನ್ನು ನಿರ್ಮಿಸಿ ಹೆಸರಾದವರು ನಿರ್ಮಾಪಕ ರಾಮು. ಅದರಲ್ಲೂ ಆಕ್ಷನ್ ಚಿತ್ರಗಳ ನಿರ್ಮಾಣದಲ್ಲಿ ಈ ಸಂಸ್ಥೆ ತನ್ನದೇ ಆದ ಹೆಸರು ಮಾಡಿದೆ. ಪ್ರಸ್ತುತ ರಾಮು ಫಿಲಂಸ್ ಸಂಸ್ಥೆಯಿಂದ ನಿರ್ಮಾಣವಾಗಿರುವ “ಅರ್ಜುನ್ ಗೌಡ” ಚಿತ್ರ‌ ಕೂಡ ಆಕ್ಷನ್ ಕಥಾಹಂದರ ಹೊಂದಿರುವ ಚಿತ್ರವಾಗಿದೆ. ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿರುವ ಈ ಚಿತ್ರದ ನಾಯಕನಾಗಿ ಪ್ರಜ್ವಲ್ ದೇವರಾಜ್ ಅಭಿನಯಿಸಿದ್ದಾರೆ.

ಅಪಾರ ವೆಚ್ಚದಲ್ಲಿ ,ಅದ್ದೂರಿ ತಾರಾಗಣದೊಂದಿಗೆ ನಿರ್ಮಾಣವಾಗಿರುವ ಅರ್ಜುನ್ ಗೌಡ ಚಿತ್ರದ ಟ್ರೇಲರ್ ಏಪ್ರಿಲ್ 10 ರಂದು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಲಿದೆ. ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದ್ದು, ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ.

ಈ ವರ್ಷ ಬಿಡುಗಡೆಯಾಗಿ ಜನಪ್ರಿಯವಾಗಿರುವ ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್‌ಪೆಕ್ಟರ್ ವಿಕ್ರಮ್ ಚಿತ್ರದ ನಂತರ ಬಿಡುಗಡೆಯಾಗುತ್ತಿರುವ ಅರ್ಜುನ್ ಗೌಡ ಚಿತ್ರದ ಬಿಡುಗಡೆಗೆ ಪ್ರಜ್ವಲ್ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಲಕ್ಕಿ ಶಂಕರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದಲ್ಲಿ ಏಳು ಸಾಹಸ ಸನ್ನಿವೇಶಗಳಿದೆ.

ಮಾಸ್ ಮಾದ ಸಾಹಸ ಸಂಯೋಜನೆಯಲ್ಲಿ ಮೂಡಿ ಬಂದಿರುವ ಈ ಚಿತ್ರದ ಆಕ್ಷನ್ ಸನ್ನಿವೇಶಗಳು. ನೋಡುಗರ ಮೈ ಜುಂ ಎನಿಸುತ್ತದೆ. ಪ್ರಜ್ವಲ್ ದೇವರಾಜ್ ಅವರಿಗೆ ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್ ಅಭಿನಯಿಸಿದ್ದಾರೆ. ಬಾಲಿವುಡ್ ನ ರಾಹುಲ್ ದೇವ್, ಸ್ಪರ್ಶ ರೇಖ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭತ್, ಜೀವನ್, ಹನುಮಂತೇ ಗೌಡ, ಮೋಹನ್ ಜುನೇಜ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕವಿರಾಜ್, ರಾಘವೇಂದ್ರ ಕಾಮತ್, ಶಂಕರ್ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ , ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ಮೋಹನ್, ಕಂಬಿ‌ರಾಜು ಅವರ ನೃತ್ಯ ನಿರ್ದೇಶನ ಅರ್ಜುನ್ ಗೌಡ ಚಿತ್ರಕ್ಕಿದೆ.

Related posts