Cini NewsSandalwood

ಎಸ್.ನಾರಾಯಣ್ ನಿರ್ದೇಶನದ ಚಿತ್ರದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು

ಡಾ||ರಾಜಕುಮಾರ್, ಡಾ||ವಿಷ್ಣುವರ್ಧನ್, ಡಾ||ಅಂಬರೀಶ್ ಮುಂತಾದ ಜನಪ್ರಿಯ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ಅವರ ನಿರ್ದೇಶನದ “ಪ್ರೊಡಕ್ಷನ್ ನಂ 1” ಚಿತ್ರ ಇತ್ತೀಚೆಗಷ್ಟೇ ಆರಂಭವಾಗಿದೆ. ಈ ನೂತನ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ. ದುನಿಯಾ ವಿಜಯ್ ಅವರು ಜೂನ್ 5 ರಿಂದ ಚಿತ್ರೀಕರಣದಲ್ಲಿ ಭಾಗಿಯಾಲಿದ್ದಾರೆ.

ಈಗಾಗಲೇ ಚಿಕ್ಕಮಗಳೂರಿನಲ್ಲಿ ಶ್ರೇಯಸ್ ಮಂಜು ಮುಂತಾದ ಕಲಾವಿದರ ಅಭಿನಯದಲ್ಲಿ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಕೆ.ಮಂಜು ಹಾಗೂ ರಮೇಶ್ ಯಾದವ್ ಜಂಟಿಯಾಗಿ ಈಶ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಈಶ ಪ್ರೊಡಕ್ಷನ್ಸ್ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು. ಎಸ್ ನಾರಾಯಣ್, ಕೆ.ಮಂಜು, ರಮೇಶ್ ಯಾದವ್ ಹಾಗೂ ದುನಿಯಾ ವಿಜಯ್ ಅವರಂತಹ ಕನ್ನಡ ಚಿತ್ರರಂಗದ ದಿಗ್ಗಜರ ಪಾಲ್ಗೊಳ್ಳುವಿಕೆಯಲ್ಲಿ ಮೂಡಿ ಬರುತ್ತಿರುವ ಈ ನೂತನ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಯಿದೆ. ಸದ್ಯದಲ್ಲೇ ಅದ್ದೂರಿಯಾಗಿ ಚಿತ್ರದ ಶೀರ್ಷಿಕೆಯನ್ನು ಅನಾವರಣಗೊಳಿಸಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ‌.

ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿರುವ ಈ ಚಿತ್ರದ ನಾಯಕಿ ಬೃಂದಾ. ವಿಭಿನ್ನಪಾತ್ರದಲ್ಲಿ ಸಾಧುಕೋಕಿಲ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಕಲ್ಯಾಣಿ, ಗಿರಿ, ಜಯರಾಂ, ಸುಜಯ್ ಶಾಸ್ತ್ರಿ, ಮಂಜು ಪಾವಗಡ ಸೇರಿದಂತೆ ಅನೇಕ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.

ಎಸ್ ನಾರಾಯಣ್ ಅವರು ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ ಮಾಡಿ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಜೆ‌ಸ್ಸಿ ಗಿಫ್ಟ್ ಅವರ ಸಂಗೀತ ನಿರ್ದೇಶನವಿದೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ,ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಸಂತು ಅವರ ನೃತ್ಯ ನಿರ್ದೇಶನವಿರುವ “ಪ್ರೊಡಕ್ಷನ್ ನಂ 1” ಚಿತ್ರದ ಪಿ.ಆರ್.ಓ ಆಗಿ ಸುಧೀಂದ್ರ ವೆಂಕಟೇಶ್ ಕಾರ್ಯ ನಿರ್ವಹಿಸುತ್ತಿದ್ದಾರೆ.

error: Content is protected !!